ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹತ್ಯೆಗಳ ತನಿಖೆಗಾಗಿ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಾಜ್ಯ ಸರ್ಕಾರ ರಚಿಸಿದೆ ಎಂದು ಐಎಎನ್‌ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕರಾದ ಪ್ರಣವ್ ಮೊಹಂತಿ ಅವರ ನೇತೃತ್ವದ ತಂಡದಲ್ಲಿ ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರೀಕ್ಷಿಕ ಎಂ.ಎಂ.ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ಇದ್ದಾರೆ.
ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ವಿ.ಗೋಪಾಲ್ ಗೌಡ ಹಾಗೂ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮತ್ತು ಅನೇಕ ಸಾಮಾಜಿಕ ಹೋರಾಟಗಾರರು ಎಸ್‌ಐಟಿ ತನಿಖೆಗೆ ಒತ್ತಾಯಿಸಿದ್ದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಅಂಬಿಕಾ ಈ ಆದೇಶ ಹೊರಡಿಸಿದ್ದಾರೆ.