ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಆರೋಪ ಮಾಡಿದ್ದಾರೆ.
ಬೆಂಗಳೂರಿನ ಸ್ವತಂತ್ರ ಉದ್ಯಾನದಲ್ಲಿ ಕಾಂಗ್ರೆಸ್ ಪಕ್ಷದಿಂದ ಇಂದು ನಡೆದ ’ಮತದಾರರ ಅಧಿಕಾರ ರ‍್ಯಾಲಿ’ ಉದ್ದೇಶಿಸಿ ಮಾತನಾಡಿದ ಅವರು, ಭಾರತದ ಚುನಾವಣಾ ಆಯೋಗ ಕಳೆದ 10 ವರ್ಷಗಳ ಮತದಾರರ ಪಟ್ಟಿಯ ಡಿಜಿಟಲ್ ರೂಪಾಂತರ ಮತ್ತು ವಿಡಿಯೋಗ್ರಾಫಿ ಅನ್ನು ತಕ್ಷಣ ತಮ್ಮ ಪಕ್ಷಕ್ಕೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.

ಮತದಾರರ ಪಟ್ಟಿಯಲ್ಲಿ ಮೋಸ ನಡೆದಿದೆ ಎಂದು ಆರೋಪಿಸಿದ ಅವರು, ಇದರಿಂದ ಬಿಜೆಪಿಗೆ ಚುನಾವಣೆಯಲ್ಲಿ ಪ್ರಯೋಜನವಾಗಿದೆ. ಇದಕ್ಕೆ ಕಾರಣರಾದವರ ವಿರುದ್ಧ ವಿಪಕ್ಷಗಳು ಕಠಿಣ ಕ್ರಮ ಜರುಗಿಸಲಿವೆ ಎಂದು ಅವರು ಎಚ್ಚರಿಸಿದರು.

ಬೆಂಗಳೂರು ಕೇಂದ್ರ ಲೋಕಾಸಭಾ ಕ್ಷೇತ್ರದ ಮಹಾದೇವಪುರ ವಿಧಾನಸಭಾ ಕ್ಷೇತ್ರ ಒಂದರಲ್ಲೇ 1 ಲಕ್ಷ 250 ಮತಚೌರ್ಯ ಜರುಗಿದೆ ಎಂದು ಆರೋಪಿಸಿದ ಆವರು, ಇದಕ್ಕೆ ಕಾರಣಕರ್ತರಾದ ಅಧಿಕಾರಿಗಳ ವಿರುದ್ಧ ಕರ್ನಾಟಕ ಸರ್ಕಾರ ತನಿಖೆ ಆರಂಭಿಸಿ, ಕಠಿಣ ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದರು.

ಕಳೆದ ಲೋಕಸಭೆ ಚುನಾವಣೆ ನಂತರ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಿತು. ಆದರೆ ಆ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚುವರಿ ಒಂದು ಕೋಟಿ ಮತದಾರರು ತಮ್ಮ ಮತ ಚಲಾಯಿಸಿದರು ಎಂದು ಆರೋಪಿಸಿದ ಅವರು, ಚುನಾವಣೆ ಪ್ರಕ್ರಿಯೆಯಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಅನುಮಾನ ನಮಗೆ ಆಗ ಶುರುವಾಯಿತು ಎಂದು ರಾಹುಲ್ ಗಾಂಧಿ ಹೇಳಿದರು.

ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ ಎಂದು ಆರೋಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮತಗಳ್ಳತನದ ವಿರುದ್ಧ ಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ, ಇಡೀ ದೇಶಾದ್ಯಂತ ವ್ಯಾಪಿಸಲಿದೆ ಎಂದು ಹೇಳಿದ್ದಾರೆ.
ಪ್ರತಿಭಟನಾ ರ‍್ಯಾಲಿ ಉದ್ದೇಶಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿದರು. ಈ ವೇಳೆ ಕಾಂಗ್ರೆಸ್‌ನ ಅನೇಕ ನಾಯಕರು ಉಪಸ್ಥಿತರಿದ್ದರು.
News By: Raghu Shikari-7411515737