ಚಿಕ್ಕಮಗಳೂರು: ಕಾಡಾನೆ ದಾಳಿಗೆ ಹಾವೇರಿ ಮೂಲದ ಕಾರ್ಮಿಕ ಬಲಿ

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಹಾವೇರಿ ಮೂಲದ ಕಾರ್ಮಿಕ ಬಲಿ
Facebook
Twitter
LinkedIn
WhatsApp

​ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ತೋಟದ ಹಾದಿಯಲ್ಲಿ ನಡೆದು ಹೋಗುತ್ತಿದ್ದ ಕೂಲಿ ಕಾರ್ಮಿಕರೊಬ್ಬರು ಆನೆ ದಾಳಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ಸಂಭವಿಸಿದೆ.

​ಘಟನೆಯ ವಿವರ:
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ತಿರುವಳ್ಳಿ ಮೂಲದ ಯಲ್ಲಪ್ಪ (45) ಮೃತಪಟ್ಟ ದುರ್ದೈವಿ. ಇವರು ಕಳೆದ ಕೆಲವು ಕಾಲದಿಂದ ಚಿಕ್ಕಮಗಳೂರು ಭಾಗದಲ್ಲಿ ಕೂಲಿ ಹಾಗೂ ಗಾರೆ ಕೆಲಸ ಮಾಡಿಕೊಂಡಿದ್ದರು.

​ಸೋಮವಾರ ಸಂಜೆ ಕೆಲಸ ಮುಗಿಸಿ ನಾಗೇಶ್ ಗೌಡ ಎಂಬುವರ ತೋಟದ ಹಾದಿಯ ಮೂಲಕ ಶ್ರೀಧರ್ ಗೌಡ ಎಂಬುವರ ತೋಟದಲ್ಲಿರುವ ಲೈನ್ ಮನೆಗೆ ತೆರಳುತ್ತಿದ್ದರು. ಈ ವೇಳೆ ಹಠಾತ್ ಎದುರಾದ ಕಾಡಾನೆ ಯಲ್ಲಪ್ಪ ಅವರ ಮೇಲೆ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ಯಲ್ಲಪ್ಪ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

​ಸ್ಥಳಕ್ಕೆ ಅಧಿಕಾರಿಗಳ ಭೇಟಿ:
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

​ಸ್ಥಳೀಯರಲ್ಲಿ ಹೆಚ್ಚಿದ ಭೀತಿ:
ಕಾಫಿ ನಾಡಿನಲ್ಲಿ ಕಾಡಾನೆಗಳ ಹಾವಳಿ ದಿನೇ ದಿನೇ ಮಿತಿ ಮೀರುತ್ತಿದ್ದು, ಕಾರ್ಮಿಕರು ತೋಟಗಳಲ್ಲಿ ಕೆಲಸ ಮಾಡಲು ಹಾಗೂ ಸಂಚರಿಸಲು ಭಯಪಡುವಂತಾಗಿದೆ. ಮೃತ ಯಲ್ಲಪ್ಪ ಅವರ ಕುಟುಂಬಕ್ಕೆ ಅರಣ್ಯ ಇಲಾಖೆ ತಕ್ಷಣವೇ ಸೂಕ್ತ ಪರಿಹಾರ ನೀಡಬೇಕು ಹಾಗೂ ಈ ಭಾಗದಲ್ಲಿ ಆನೆಗಳ ಹಾವಳಿಯನ್ನು ತಡೆಗಟ್ಟಲು ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.