ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿಂದು ಸರ್ವಪಕ್ಷಗಳ ಸಭೆ ನಡೆಯಿತು.
ಸಭೆ ಬಳಿಕ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸುದ್ದಿಗಾರರೊಂದಿಗೆ ಮಾತನಾಡಿ, ಸುಗಮ ಕಲಾಪಕ್ಕಾಗಿ ಎಲ್ಲ ರಾಜಕೀಯ ಪಕ್ಷಗಳ ಸಹಕಾರ ಕೋರಲಾಗಿದೆ. ನಾಳೆ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ತದ ನಂತರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು, ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಶನಿವಾರ ಕೇಂದ್ರ ಬಜೆಟ್ ಮಂಡನೆಯಾಗಲಿದೆ. 16 ಮಸೂದೆಗಳು ಸದನದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ ಎಂದರು.
ಸೋಮವಾರ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಲೋಕಸಭೆ ಮತ್ತು ರಾಜ್ಯಸಭೆ ಚರ್ಚೆ ನಡೆಸಲಿದೆ. ನಾಳೆ ಆರಂಭವಾಗುವ ಬಜೆಟ್ ಅಧಿವೇಶನದ ಮೊದಲ ಚರಣ ಫೆಬ್ರವರಿ 13 ರವರೆಗೆ ಮುಂದುವರಿಯುತ್ತದೆ. ಬಜೆಟ್ ಅಧಿವೇಶನದ ಎರಡನೇ ಚರಣ ಮಾರ್ಚ್ 10 ರಿಂದ ಏಪ್ರಿಲ್ 4 ರವರೆಗೆ ನಡೆಯಲಿದೆ.
ಈ ನಡುವೆ, ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯುವುದರಿಂದ ಫೆಬ್ರವರಿ 5 ರಂದು ಸಂಸತ್ ಕಲಾಪ ಇರುವುದಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ದೆಹಲಿಯಲ್ಲಿಂದು ಹೇಳಿದ್ದಾರೆ.