ಕನಕಪುರ: ಈ ಪ್ರದೇಶ ಬೆಂಗಳೂರಿನ ಭಾಗ ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕನಕಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು

“ಪಾಪ ಕುಮಾರಸ್ವಾಮಿ ಅವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ನಾನು ಹಾಗೂ ಇಲ್ಲಿರುವ ಕೆಲವರು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದೆವು. ಇದು ಕನಕಪುರ ಲೋಕಸಭಾ ಕ್ಷೇತ್ರ ಇತ್ತು. ನಮ್ಮ ಅಸ್ಥಿತ್ವವನ್ನು ಉಳಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಇದನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಎಂದು ಮಾಡಿದೆವು. ಈಗ ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣ ಮಾಡಲು ಮುಂದಾಗಿದ್ದು, ಇದನ್ನು ಮಾಡಬಾರದು ಎಂದು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ಅರ್ಜಿ ಹಾಕಿದ್ದಾರೆ. ಅವರು ಏನಾದರೂ ಮಾಡಲಿ, ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿಯೇ ಮಾಡುತ್ತೇವೆ. ಅದಕ್ಕೆ ಏನು ಮಾಡಬೇಕೋ ಅದನ್ನು ನಾನು ಮಾಡುತ್ತೇನೆ” ಎಂದು ತಿಳಿಸಿದರು.

ಕುಮಾರಸ್ವಾಮಿಗೆ ಅಭಿವೃದ್ಧಿಗಿಂತ ದ್ವೇಷ ರಾಜಕಾರಣವೇ ಹೆಚ್ಚು
ಅಭಿವೃದ್ಧಿ ವಿಚಾರವಾಗಿ ಯಾರೂ ನನ್ನನ್ನು ಭೇಟಿ ಮಾಡುತ್ತಿಲ್ಲ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ಒಂದೇ ದಿನದಲ್ಲಿ ಮೇಕೆದಾಟು ಯೋಜನೆಗೆ ಮೋದಿ ಅವರಿಂದ ಸಹಿ ಹಾಕಿಸುವುದಾಗಿ ಹೇಳಿದ್ದೆಯಲ್ಲಾ, ಯಾಕೆ ಮಾಡಿಸಿಲ್ಲಾ? ನಮ್ಮ ಸಚಿವ ಎಂ.ಬಿ ಪಾಟೀಲ್ ಅವರ ಬಳಿ ಹೋಗಿ ಬಂಡವಾಳ ಹೂಡಿಕೆದಾರರ ಸಮಾವೇಶದ ಬಗ್ಗೆ ಚರ್ಚೆ ಮಾಡಿಲ್ಲವೇ? ಅವರಿಗೆ ದ್ವೇಷದ ರಾಜಕಾರಣವೇ ಮುಖ್ಯವೇ ಹೊರತು ರಾಜ್ಯದ ಅಭಿವೃದ್ಧಿಯಲ್ಲ. ದ್ವೇಷದಿಂದ ಯಾರೂ ಯಾವುದೇ ಸಾಧನೆ ಮಾಡಿಲ್ಲ. ದೊಡ್ಡ ದೊಡ್ಡ ಚಕ್ರವರ್ತಿಗಳೇ ಕೆಳಗೆ ಬಿದ್ದಿದ್ದಾರೆ. ರಾಜಕಾರಣದಲ್ಲಿ ಯಾರೂ ಶಾಶ್ವತವಲ್ಲ” ಎಂದು ಕಿಡಿಕಾರಿದರು.